ಉಡುಪಿ : ಪೆರ್ಡೂರಿನ ಯುವಕ ಪ್ರದೀಪ ಪೂಜಾರಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತಡವಾಗಿಯಾದರೂ ಸಿಐಡಿಗೆ ವಹಿಸಿರುವುದು ಸ್ವಾಗತಾರ್ಹ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಪ್ರೇಮ ವೈಫಲ್ಯದ ಹಿನ್ನೆಲೆಯನ್ನು ಮುಂದಿಟ್ಟುಕೊಂಡು ಪ್ರದೀಪ್ ಪೂಜಾರಿ ಮೇಲೆ ಹಲ್ಲೆ ನಡೆಸಲಾಗಿತ್ತು. ಇದರಿಂದ ಮನನೊಂದಿದ್ದ ಯುವಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಯಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಕರಣದಲ್ಲಿ ಯುವಕನ ಸಾವಿಗೆ ಕಾರಣರಾದ ಪೊಲೀಸ್ ಅಧಿಕಾರಿಗಳು, ಹಲ್ಲೆ ನಡೆಸಿದವರು ಹಾಗೂ ವ್ಯವಸ್ಥಿತ ಸಂಚಿನಲ್ಲಿ ಭಾಗಿಯಾಗಿರುವವರ ವಿರುದ್ಧ ಪಕ್ಷಾತೀತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಮೂಲಕ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಸುರೇಶ ಶೆಟ್ಟಿ ಆಗ್ರಹಿಸಿದ್ದಾರೆ.
ಪ್ರಕರಣದಲ್ಲಿ ಇನ್ನೂ ಬಂಧನವಾಗದೆ ಉಳಿದಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಗುರ್ಮೆ ಸುರೇಶ ಶೆಟ್ಟಿ ಒತ್ತಾಯಿಸಿದ್ದಾರೆ.



