ಹೆಬ್ರಿ : ಹೆಬ್ರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಐಕ್ಯುಎಸಿ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಇತ್ತೀಚೆಗೆ ಕಾಲೇಜಿನಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ಅಧಿಕಾರಿ ಮಹಾಬಲೇಶ್ವರ್ ಎಚ್‌ಐವಿ ಏಡ್ಸ್‌ನ ಲಕ್ಷಣಗಳು, ಸೋಂಕು ಹರಡುವ ವಿಧಾನಗಳು, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸುವ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್. ಮಾತನಾಡಿ, ಎಚ್‌ಐವಿ ಏಡ್ಸ್ ಕುರಿತು ಸಮಾಜದಲ್ಲಿ ಅರಿವು ಮೂಡಿಸುವ ಜವಾಬ್ದಾರಿ ಯುವಜನರ ಮೇಲಿದೆ. ಆರೋಗ್ಯಕರ ಜೀವನಶೈಲಿ ಹಾಗೂ ಸಾಮಾಜಿಕ ಜಾಗೃತಿಯ ಮೂಲಕ ಈ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.
ಐಕ್ಯುಎಸಿ ಸಂಚಾಲಕ ಡಾ. ಗಣೇಶ್ ಎಸ್. ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕಿ ಸುಷ್ಮಾ ರಾವ್ ಉಪಸ್ಥಿತರಿದ್ದರು.
ಎನ್‌ಎಸ್‌ಎಸ್ ಹಾಗೂ ರೆಡ್ ರಿಬ್ಬನ್ ಕ್ಲಬ್ ಸಂಚಾಲಕ ಪ್ರವೀಣ್ ಶೆಟ್ಟಿ ಸ್ವಾಗತಿಸಿದರು. ಯುವ ರೆಡ್ ಕ್ರಾಸ್ ಸಂಚಾಲಕ ಡಾ. ಮನೋಜ್ ಕುಮಾರ್ ವಂದಿಸಿದರು. ವಿಜೇತಾ ನಿರೂಪಿಸಿದರು.


