Monday, November 9, 2026
Homeಹೆಬ್ರಿ ನ್ಯೂಸ್ ವಿಶೇಷಕಸ್ತೂರಿ ರಂಗನ್‌ ವರದಿ - ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ

ಕಸ್ತೂರಿ ರಂಗನ್‌ ವರದಿ – ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ

 

7ನೇ ಕರಡು ಅಧಿಸೂಚನೆ ಅಂತಿಮ ಗೊಳಿಸಬೇಡಿ.

ಕೇಂದ್ರ ಅರಣ್ಯ ಸಚಿವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನವಿ.

ನವದೆಹಲಿ : ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ೭ನೇ ಕರಡು ಅಧಿಸೂಚನೆ ಅಂತಿಮಗೊಳಿಸಬೇಡಿ, ಕರ್ನಾಟಕದ ಪ್ರಮುಖ ಯೋಜನೆಗಳಾದ ಶರಾವತಿ ಪಂಪ್ಡ್‌ ಸ್ಟೋರೇಜ್‌ ಹಾಗೂ ಮೇಕೆದಾಟು ಯೋಜನೆಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಅನುಮೋದನೆ ನೀಡಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನವದೆಹಲಿಯ ಪರಿಸರ ಭವನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕೇಂದ್ರ ಪರಿಸರ, ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚಿಸಿ, ರಾಜ್ಯದ ಯೋಜನೆಗಳ ಕುರಿತು ಮನವಿ ಸಲ್ಲಿಸಿದರು.

*ಕಸ್ತೂರಿ ರಂಗನ್‌ ವರದಿ; ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ೭ನೇ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಬೇಡಿ :

“ಕಸ್ತೂರಿ ರಂಗನ್‌ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ೭ನೇ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸದಂತೆ” ಕೇಂದ್ರ ಸಚಿವರಿಗೆ ಮನವಿ ಮಾಡಿದರು.

“ಕಸ್ತೂರಿರಂಗನ್ ವರದಿಯ ಆಧಾರದ ಮೇಲೆ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಘೋಷಣೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆಯು ಹೊರಡಿಸಿರುವ 27 ಜುಲೈ 2026 ರ 7ನೇ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸದಂತೆ ಕೋರಿ ದಿನಾಂಕ: 2026 ಸೆಷ್ಟಂಬರ್‌ ೨೫ ರಂದು ಪತ್ರದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮನವಿ ಮಾಡಲಾಗಿದೆ. ರಾಜ್ಯ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ (HLC) ವರದಿ ಸಲ್ಲಿಕೆಯಾಗಿ, ೧ ವರ್ಷದ ಅವಧಿಯಲ್ಲಿ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಅಧಿಸೂಚನೆಯನ್ನು ಅಂತಿಮಗೊಳಿಸಬಾರದು ಮತ್ತು ರಾಜ್ಯ ಸರ್ಕಾರದ ಸಮಾಲೋಚನೆಯೊಂದಿಗೆ ಭಾರತ ಸರ್ಕಾರವು ಮುಂದಿನ ಕ್ರಮಗಳನ್ನು ಕೈಗೊಳ್ಳಬಹುದು” ಎಂದು ಡಿ.ಕೆ. ಶಿವಕುಮಾರ್‌ ಮನವಿ ಮಾಡಿದರು.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ :

“ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಯ ಪ್ರಸ್ತಾಪ ಕುರಿತು ಕೊನೆಯ ಬಾರಿಗೆ 28 ಫೆಬ್ರವರಿ 2026 ರಂದು ನಡೆದ SC-NBWL ನ 89ನೇ ಸಭೆಯಲ್ಲಿ ಚರ್ಚಿಸಲಾಯಿತು. ತಾಂತ್ರಿಕ ಸಮಿತಿಯು ಎತ್ತಿದ ಅಂಶಗಳಿಗೆ ಸ್ಪಷ್ಟೀಕರಣ ಹಾಗೂ NIAS ನಿಂದ ತಾಂತ್ರಿಕ ವರದಿಯನ್ನು ಸಲ್ಲಿಸುವಂತೆ ರಾಜ್ಯ/ಬಳಕೆದಾರ ಸಂಸ್ಥೆಗೆ ಸೂಚಿಸಲಾಗಿತ್ತು. ಈ ಸಂಬಂಧ ಬೆಂಗಳೂರಿನ ‘ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್’ (NIAS) ವರದಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದರ ಜೊತೆಗೆ, ಸ್ಥಾಯಿ ಸಮಿತಿಯು ಎತ್ತಿದ ಪ್ರಶ್ನೆಗಳಿಗೆ ಕರ್ನಾಟಕ ಸರ್ಕಾರವು ಸೂಕ್ತ ಉತ್ತರಗಳನ್ನು ನೀಡಿದೆ” ಎಂದು ಶಿವ ಕುಮಾರ್‌ ವಿವರಿಸಿದರು.

*ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆ :

“ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಭೂ-ತಾಂತ್ರಿಕ (geo-technical) ಸಮೀಕ್ಷೆಗಾಗಿ ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಒಟ್ಟು 0.0000352 ಹೆಕ್ಟೇರ್ ಪ್ರದೇಶದಲ್ಲಿ 20 ಬೋರ್ ಹೋಲ್ ಗಳನ್ನು ಕೊರೆಯಲು ಅನುಮತಿ ಕೋರುವ ಈ ಪ್ರಸ್ತಾಪವನ್ನು ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಸ್ಥಾಯಿ ಸಮಿತಿ ಪರಿಶೀಲನೆಗಾಗಿ 1 ಜುಲೈ 2026 ರಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು. ಇತ್ತೀಚೆಗೆ, ಈ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಭಾರತದ ಸರ್ವೋಚ್ಚ ನ್ಯಾಯಾಲಯದ ಮುಂದೆ ಬಾಕಿ ಇರುವ ವಿವಿಧ ಅರ್ಜಿಗಳ ಸ್ಥಿತಿಗತಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು (MoEF&CC) ಅಗತ್ಯ ದಾಖಲೆ/ಮಾಹಿತಿಯನ್ನು (EDS) ಕೋರಿದ್ದು, ಅದನ್ನು ಶೀಘ್ರದಲ್ಲೇ ಒದಗಿಸಲಾಗುವುದು. ಆದರೆ, ಈ ಪ್ರಸ್ತಾಪವು ಕೇವಲ ಸಮೀಕ್ಷೆ ಮತ್ತು ತನಿಖಾ ಚಟುವಟಿಕೆಗಳಿಗೆ ಮಾತ್ರ ಸಂಬಂಧಿಸಿದ್ದು, ಪ್ರಸ್ತುತ ಯಾವುದೇ ಸಂರಕ್ಷಿತ ಪ್ರದೇಶದ ಭೂಮಿಯನ್ನು ಯೋಜನೆಗೆ ಬಳಸಿಕೊಳ್ಳಲು (diversion) ಕೋರುತ್ತಿಲ್ಲ” ಎಂದು ವಿವರಿಸಿದ್ದಾರೆ.

“ಈ ನಿಟ್ಟಿನಲ್ಲಿ, NBWL ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ, ಮೇಲ್ಕಂಡ ಎರಡು ಪ್ರಸ್ತಾಪಗಳನ್ನು ಶೀಘ್ರವಾಗಿ ಪರಿಶೀಲಿಸಿ ಶಿಫಾರಸು ಮಾಡಬೇಕು” ಎಂದು ಮನವಿ ಮಾಡಿದರು.

“ಬೆಳಗಾವಿಯ ಎಕೊ ಕೇನ್ ಶುಗರ್ ಅಂಡ್ ಎನರ್ಜಿ ಲಿ. ಸಕ್ಕರೆ ಕಾರ್ಖಾನೆಯು 2016 ಕ್ಕೂ ಮೊದಲು ಪ್ರಾರಂಭವಾಗಿರುವುದರಿಂದ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರುವುದಿಲ್ಲ. ಈ ಸಕ್ಕರೆ ಕಾರ್ಖಾನೆಯಲ್ಲಿ ಸುಮಾರು 500 ಕೆಲಸಗಾರರು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 5000 ಕುಟುಂಬಗಳು ಈ ಕಾರ್ಖಾನೆಯನ್ನು ಅವಲಂಬಿಸಿವೆ. ಆದ್ದರಿಂದ ಈ ಸಕ್ಕರೆ ಕಾರ್ಖಾನೆಯನ್ನು ಪರಿಸರ ಸೂಕ್ಷ್ಮ ವಲಯದಿಂದ ಕೈಬಿಡಬೇಕು” ಎಂದು ಡಿ.ಕೆ.ಶಿವಕುಮಾರ್‌ ಅವರು ಮನವಿ ಮಾಡಿದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!