Monday, November 9, 2026
Homeಪ್ರಮುಖ ಸುದ್ದಿಪೆರ್ಡೂರು ಪ್ರದೀಪ್ ಪೂಜಾರಿ ಪ್ರಕರಣ : ಸಿಐಡಿಗೆ

ಪೆರ್ಡೂರು ಪ್ರದೀಪ್ ಪೂಜಾರಿ ಪ್ರಕರಣ : ಸಿಐಡಿಗೆ

ಡಿಜಿ ಮತ್ತು ಐಜಿಪಿ ಅವರ ಆದೇಶದ ಹಿನ್ನಲೆಯಲ್ಲಿ ನಿರ್ಧಾರ – ಎಸ್‌ಪಿ ಹರಿರಾಮ್ ಶಂಕರ್.

ಉಡುಪಿ : ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ದಳ (CID)ಕ್ಕೆ ವರ್ಗಾಯಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೋಮವಾರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಈ ಕೆಳಗಿನ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.
1) Udupi Women P.S Cr.No.67/2026 u/s 329, 74, 109, 352, 351(2), 77 BNS 2023.
2) Hiriadka P.S Cr.No.62/2026 u/s 189 (2), 191, 126 (2), 115(2), 118 (1), 140 (1), 352, 190 BNS 2023.
3) Udupi Town P.S Crime No.149/2026 u/s 108, 190 BNS 2023.
ಪ್ರದೀಪ್ ಪೂಜಾರಿ ಸಾವಿನ ಪ್ರಕರಣ ಕರಾವಳಿ ಭಾಗದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ತನಿಖೆಯ ಕುರಿತು ಮೃತನ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳು ಹಲವು ಪ್ರಶ್ನೆಗಳನ್ನು ಎತ್ತಿದ್ದವು. ತನಿಖೆಯನ್ನು ಸಿಐಡಿ ಅಥವಾ ಸಿಬಿಐಗೆ ವಹಿಸಬೇಕೆಂದು ಕುಟುಂಬಸ್ಥರು ಮತ್ತು ಸಂಘಟನೆಗಳ ಮುಖಂಡರು ಆಗ್ರಹಿಸಿದ್ದರು. ಸಿಐಡಿ ತನಿಖೆ ನಡೆಸದಿದ್ದರೆ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಲಾಗಿತ್ತು.
ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಕರ್ತವ್ಯ ಲೋಪದ ಬಗ್ಗೆಯೂ ತನಿಖೆ ನಡೆಸಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ನಡೆದ ವಿಚಾರಣೆಯ ವರದಿಯ ಆಧಾರದ ಮೇಲೆ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ವರ್ಗಾಯಿಸಲಾಗಿತ್ತು. ಅಲ್ಲದೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬಂದಿಯನ್ನು ಅಮಾನತುಗೊಳಿಸಲಾಗಿತ್ತು.
ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಮಧ್ಯಪ್ರದೇಶ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯುವ ಪ್ರಕ್ರಿಯೆಯೂ ನಡೆದಿದೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳ ತನಿಖೆಯನ್ನೂ ಸಿಐಡಿಗೆ ವಹಿಸುವ ಮೂಲಕ ಮಹತ್ವದ ಬೆಳವಣಿಗೆ ನಡೆದಿದೆ. ಮುಂದಿನ ತನಿಖೆಯನ್ನು ಸಿಐಡಿ ಕೈಗೆತ್ತಿಕೊಳ್ಳಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!